Arsikere
ಅರಸೀಕೆರೆ ತಾಲ್ಲೂಕು ಕಸಬಾ ಹೋಬಳಿ ಮೈಲನಹಳ್ಳಿ ಗ್ರಾಮದ ಹತ್ತಿರ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಭಾನುವಾರ ತಡರಾತ್ರಿ ಬಸ್ ಮತ್ತು ಲಾರಿಯ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಚಾಲಕರು ಸೇರಿದಂತೆ 40 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಶಿವಮೊಗ್ಗದಿಂದ ಬೆಂಗಳೂರಿಗೆ ಹೋಗುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮತ್ತು ಬೆಂಗಳೂರಿನಿಂದ ಸಿಮೆಂಟ್ ಚೀಲಗಳನ್ನು ಕೊಂಡೊಯ್ಯುತ್ತಿದ್ದ ಕೊಂಡೊಯ್ಯುತ್ತಿದ್ದ ಲಾರಿಯ ನಡುವೆ ಮೈಲನ ಹಳ್ಳಿ ಗ್ರಾಮದ ಬಳಿ ಇರುವ ಮುರಾರ್ಜಿ ದೇಸಾಯಿ ವಸತಿ ಶಾಲೆಯ ತಿರುವಿನಲ್ಲಿ ಅಪಘಾತವಾಗಿದೆ. ಅಪಘಾತದ ತೀವ್ರತೆಗೆ ಲಾರಿ ಮತ್ತು ಬಸ್ ಸಂಪೂರ್ಣ ನುಜ್ಜುಗುಜ್ಜಾಗಿದೆ.
ಗಾಯಗೊಂಡ ಕೆಲವರಿಗೆ ತಿಪಟೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಮತ್ತೆ ಕೆಲವರಿಗೆ ಅರಸೀಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗಳಿಗೆ ಕಳಿಸಿಕೊಡಲಾಗಿದೆ. ಅಪಘಾತದ ಪರಿಣಾಮ ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಕೆಲವು ಗಂಟೆಗಳ ಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಅರಸೀಕೆರೆ ಮತ್ತು ತಿಪಟೂರು ಪೊಲೀಸರು ವಾಹನಗಳನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದರು. ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿತ್ರಮಾಹಿತಿ : ಪೊಲೀಸ್ ಇಲಾಖೆ